ನವದೆಹಲಿ: ರಾಜ್ಯ ಪಠ್ಯಕ್ರಮವಿರುವ ಶಾಲೆಗಳ 5, 8, 9 ಮತ್ತು 11ನೇ ತರಗತಿ ಮಕ್ಕಳಿಗೆ ರಾಜ್ಯ ಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಕರ್ನಾಟಕ ಸರ್ಕಾರದ ಕ್ರಮಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆ ನೀಡಿದೆ.
ನ್ಯಾಯಮೂರ್ತಿಗಳಾದ ಬೇಲಾ ಎಂ.ತ್ರಿವೇದಿ ಮತ್ತು ಪಂಕಜ್ ಮಿಥಾಲ್ ಅವರನ್ನೊಳಗೊಂಡ ಪೀಠ, ಮಾರ್ಚ್ 7ರಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರ ರದ್ದುಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿತ್ತು. ವಿಭಾಗೀಯ ಪೀಠದ ಈ ಆದೇಶ ಪ್ರಶ್ನಿಸಿ ಖಾಸಗಿ ಶಾಲೆಗಳು ಮತ್ತು ಪೋಷಕರ ಸಂಘಟನೆಗಳು ಸುಪ್ರೀಂಕೋರ್ಟ್‌ಗೆ ವಿಶೇಷ ರಜಾ ಅವಧಿಯ ಅರ್ಜಿಗಳನ್ನು ಸಲ್ಲಿಸಿದ್ದವು. ಈ ಅರ್ಜಿಗಳ ವಿಚಾರಣೆಗೆ ಒಪ್ಪಿದ ಸುಪ್ರೀಂಕೋರ್ಟ್, ಪರೀಕ್ಷೆ ರದ್ದುಗೊಳಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠದ ತೀರ್ಪು ಪ್ರಶ್ನಿಸಿರುವ ರಾಜ್ಯ ಸರ್ಕಾರದ ಅರ್ಜಿಯ ಕುರಿತು ನಿರ್ಧಾರ ಪ್ರಕಟಿಸುವಂತೆ ವಿಭಾಗೀಯ ಪೀಠವನ್ನು ಕೇಳಿತ್ತು.
ಪರೀಕ್ಷೆ ಮುಂದೂಡಿಕೆ : ಸುಪ್ರೀಂಕೋರ್ಟ್ ಹೈಕೋರ್ಟ್ ವಿಭಾ ಗೀಯ ಪೀಠದ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹಿನ್ನೆಲೆ, ಮಾರ್ಚ್ 11ರಿಂದ 18ರವರೆಗೆ ನಿಗದಿಯಾಗಿದ್ದ ಬೋರ್ಡ್ ಪರೀಕ್ಷೆಗಳನ್ನು ಶಾಲಾ ಶಿಕ್ಷಣ ಇಲಾಖೆ ಮುಂದೂಡಿದೆ.
ಪರೀಕ್ಷೆಗೆ ಅನುಮತಿ ನೀಡುವ ಮೂಲಕ ಏಕ ಸದಸ್ಯ ಪೀಠದ ತೀರ್ಪನ್ನು ರದ್ದುಗೊಳಿಸಿತ್ತು. ಇದೀಗ ವಿಭಾಗೀಯ ಪೀಠದ ತೀರ್ಪಿಗೆ ಸುಪ್ರೀಂಕೋರ್ಟ್ ತಡೆ ನೀಡಿದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಅಗತ್ಯವಿಲ್ಲ ಮತ್ತು 10 ಮತ್ತು 12ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ಪರೀಕ್ಷೆ ನಡೆಸಲಾಗುತ್ತಿದೆ ಎಂಬ ರಾಜ್ಯ ಸರ್ಕಾರದ ವಾದವನ್ನು ಸುಪ್ರೀಂಕೋರ್ಟ್ ಪುರಸ್ಕರಿಸಿಲ್ಲ.
ಇದು ಪರೀಕ್ಷೆಯಲ್ಲ, 10 ಮತ್ತು 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳನ್ನು ಸಿದ್ದಪಡಿಸುವ ಉದ್ದೇಶದಿಂದ ಒಂದು ರೀತಿಯ ಮೌಲ್ಯಮಾಪನ ಎಂದು ರಾಜ್ಯ ವಾದಿಸಿದರೂ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸುಪ್ರೀಂಕೋರ್ಟ್ ಅದಕ್ಕೆ ಮನ್ನಣೆ ನೀಡಿಲ್ಲ.