ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿದ ಮಿತ್ರ ಪಕ್ಷಗಳು.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ದೆಹಲಿಯಲ್ಲಿ ಬುಧವಾರ ನಡೆದ ಎನ್‌ಡಿಎ 21 ಪಕ್ಷಗಳ ಸಭೆಯಲ್ಲಿ ಮೋದಿ ಆಯ್ಕೆ ಬಗ್ಗೆ ನಿರ್ಣಯ ಅಂಗೀಕರಿಸಲಾಗಿದೆ. ಜೂ.8ರಂದು ಪ್ರಧಾನಿನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರೊಂದಿಗೆ ಮೋದಿ ಜವಾಹರಲಾಲ್ ನೆಹರು ಅವರ ಹ್ಯಾಟ್ರಿಕ್ ಸಾಧನೆಯನ್ನು ಸರಿಗಟ್ಟಲಿದ್ದಾರೆ. ಸಭೆಯಲ್ಲಿ ಅಂಗೀಕರಿಸಲಾದ ನಿರ್ಣಯದಲ್ಲಿ ಮೈತ್ರಿಕೂಟ ಸರ್ಕಾರ ಬಡವರು, ಮಹಿಳೆಯರು, ರೈತರು, ಯುವಕರು ಹಾಗೂ ಸಮಾಜ ವಂಚಿತ ಸೇವೆಗಳಿಗೆ ಆದ್ಯತೆ ನೀಡಲು ತೀರ್ಮಾನಿಸಿದೆ. ಈ ಬಾರಿಯ ಲೋಕಸಭಾ ಚುನಾವಣೆಯನ್ನು ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಒಗ್ಗಟ್ಟಾಗಿ ಹೋರಾಡಿ ಗೆಲುವು ಸಾಧಿಸುವಲ್ಲಿ ಯಶಸ್ವಿಯಾಗಿದ್ದೇವೆ. ಹೀಗಾಗಿ ನರೇಂದ್ರ ಮೋದಿಯವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಿತ್ರ ಪಕ್ಷಗಳಾದ ಟಿಡಿಪಿ ಮತ್ತು ಜೆಡಿಯು ಕೆಲವು ಪ್ರಮುಖ ಖಾತೆಗಳಿಗೆ ಬೇಡಿಕೆ ಇಟ್ಟಿವೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರ ರಚಿಸುವ ಸಂಬಂಧ ಬಿಜೆಪಿ ಕೆಲವು ಪ್ರಮುಖ ಖಾತೆಗಳನ್ನು ಬಿಟ್ಟುಕೊಡುವುದು ಅನಿವಾರ್ಯವಾಗಿದೆ. ಲೋಕಸಭಾ ಚುನಾವಣಾ ಫಲಿತಾಂಶದಲ್ಲಿ ಎನ್‌ಡಿಎ ಸರಳ ಬಹುಮತದೊಂದಿಗೆ ಮೂರನೇ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಸಫಲವಾಗಿದೆ.
ಎನ್‌ಡಿಎ ಬಹುಮತಕ್ಕೆ ಅಗತ್ಯವಿದ್ದ 272 ಮ್ಯಾಜಿಕ್ ಸಂಖ್ಯೆಯನ್ನು ತಲುಪಿದೆ. 543 ಸದಸ್ಯ ಬಲದ ಲೋಕಸಭೆಯಲ್ಲಿ ಬಿಜೆಪಿ 240 ಗಳಿಸಿತ್ತು. ಇದು 2014 ನಂತರ ಬಿಜೆಪಿಗೆ ಸೀಟುಗಳ ಸಂಖ್ಯೆ ಕಡಿಮೆಯಾಗಿದ್ದು, ಮಿತ್ರ ಪಕ್ಷಗಳ ನೆರವಿನೊಂದಿಗೆ ಸರ್ಕಾರ ರಚಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಟಿಡಿಪಿ 16, ಜೆಡಿಯು 12, ಶಿಂಧೆ ನೇತೃತ್ವದ ಶಿವಸೇನೆ 7 ಮತ್ತು ಎಲ್‌ಜಿಪಿ (ರಾಮ್ ವಿಲಾಸ್) ಐದು ಸ್ಥಾನಗಳನ್ನು ಗೆದ್ದು ಮೋದಿ ಮೂರನೇ ಬಾರಿಗೆ ಸರ್ಕಾರ ರಚನೆಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತಿವೆ. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟ (ಎನ್‌ಡಿಎ) ನಾಯಕರು ಔಪಚಾರಿಕವಾಗಿ ಮೋದಿಯವರ ನಾಯಕತ್ವವನ್ನು ಬೆಂಬಲಿಸಿದ್ದು, ಬಿಜೆಪಿ ನೇತೃತ್ವದಲ್ಲಿ ಸರ್ಕಾರ ರಚನೆಗೆ ಬೆಂಬಲ ಪತ್ರ ನೀಡಿವೆ. ಎಂದು ಮೂಲಗಳು ತಿಳಿಸಿವೆ.
ಸಭೆಯಲ್ಲಿ ಟಿಡಿಪಿ ನಾಯಕ ಎನ್.ಚಂದ್ರಬಾಬು ನಾಯ್ಡು, ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ, ಎಲ್‌ಜೆಪಿ ನಾಯಕ ಚಿರಾಗ್ ಪಾಸ್ವಾನ್ ಸೇರಿದಂತೆ ಹಿರಿಯ ಬಿಜೆಪಿ ನಾಯಕರು ಭಾಗವಹಿಸಿದ್ದರು.