ಚಿಕ್ಕಬಳ್ಳಾಪುರ : ಶೌಚಾಲಯದ ಮಹತ್ವದ ಕುರಿತು ಅರಿವು ಮೂಡಿಸುವ ಮೂಲಕ ಜಿಲ್ಲೆಯಾದ್ಯಂತ ಇಂದಿನಿಂದ ಡಿಸೆಂಬರ್ 10 ರವರೆಗೆ ವಿಶ್ವ ಶೌಚಾಲಯ ದಿನಚಾರಣೆಯನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಅವರು ತಿಳಿಸಿದರು.
ಮಂಗಳವಾರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ನ ಸರ್.ಎಂ.ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ವಿಶ್ವ ಶೌಚಾಲಯ ದಿನದ ಅಂಗವಾಗಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಾವೆಲ್ಲರೂ ಆರೋಗ್ಯವಾಗಿದ್ದೇವೆ. ಸುರಕ್ಷಿತವಾಗಿದ್ದೇವೆ ಏಕೆಂದರೆ ನಾವು ಬಯಲು, ಬಹಿರ್ದೆಸೆ ಮಾಡುವುದಿಲ್ಲ. ಮನೆಯಲ್ಲಿಯೇ ಶೌಚಾಲಯ ಬಳಸುತ್ತೇವೆ ಎಂಬ ಸಂಕಲ್ಪವನ್ನು ಪ್ರತಿಯೊಬ್ಬರು ಅನುಸರಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ನಿಯಮಿತವಾಗಿ ಕೈತೊಳೆಯಬೇಕು. ನೀರನ್ನು ಕಾಯಿಸಿ ಆರಿಸಿ ಕುಡಿಯಬೇಕು. “ಅಂದದ ಶೌಚಾಲಯ ಆನಂದದ ಜೀವನವನ್ನು ನೀಡಲಿದೆ” ಎಂಬುದನ್ನು ಎಲ್ಲರೂ ಅರಿತು ಶೌಚಾಲಯವನ್ನು ಪ್ರತಿಯೊಬ್ಬರು ಬಳಸಬೇಕು ಎಂದು ತಿಳಿಸಿದರು.
ರಾಷ್ಟ್ರದ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಬಲಪಡಿಸಬೇಕು. ಹಿಂಸಾಚಾರವನ್ನು ಸಂಪೂರ್ಣವಾಗಿ ಮುಕ್ತ ಮಾಡಬೇಕು. ಈ ನಿಟ್ಟಿನಲ್ಲಿ ಇಂದಿನಿಂದ ರಾಷ್ಟ್ರೀಯ ಐಕ್ಯತಾ ಸಪ್ತಾಹವನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದ ಜಿಲ್ಲಾಧಿಕಾರಿಗಳು ರಾಷ್ಟ್ರೀಯ ಐಕ್ಯತಾ ದಿನಾಚರಣೆಯ ಪ್ರತಿಜ್ಞಾ ವಿಧಿಯನ್ನು ಈ ವೇಳೆ ಬೋಧಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ. ನಿಟ್ಟಾಲಿ ಅವರು ಮಾತನಾಡಿ, ವಿಶ್ವ ಶೌಚಾಲಯ ದಿನದ ಅಂಗವಾಗಿ ಇಂದಿನಿಂದ ಶೌಚಾಲಯದ ಅನುಕೂಲತೆಯ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲೆಯಾದ್ಯಂತ ಪ್ರಬಂಧ ಸ್ಪರ್ಧೆ, ಚರ್ಚಾಸ್ವರ್ಧೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಶಾಲಾ ಕಾಲೇಜು ಹಂತದಲ್ಲಿ ಏರ್ಪಡಿಸಲಾಗುವುದು. ಮಾದರಿಯಾಗಿ ಸ್ವಚ್ಚತೆಯನ್ನು ಕಾಪಾಡುವ ವೈಯಕ್ತಿಕ ಹಾಗೂ ಸಮುದಾಯದ ಶೌಚಾಲಯಗಳನ್ನು ಗುರ್ತಿಸಿ ಗೌರವಿಸುವ ಕಾರ್ಯವನ್ನು ಮಾಡಲಾಗುವುದು ಎಂದು ತಿಳಿಸಿ, ಶೌಚಾಲಯದ ಮಹತ್ವದ ಕುರಿತು ಪ್ರತಿಜ್ಞಾನವಿಧಿಯನ್ನು ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅತಿಕ್ ಪಾಷಾ, ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.