ಬೆಂಗಳೂರು: ವಿಧಾನಸೌಧದಲ್ಲಿ ಗುರುವಾರ ಸಿಎಂ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಗಂಭೀರ ಚರ್ಚೆ ನಡೆದಿದ್ದು, 7ನೇ ವೇತನ ಆಯೋಗದ ಶಿಫಾರಸು ಜಾರಿ ಅಧಿಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ವಹಿಸಲಾಗಿದೆ.
ಈ ಮೂಲಕ 7ನೇ ವೇತನ ಆಯೋಗ ಜಾರಿ ಮಾಡಬೇಕೆಂಬ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರುವ ಕಾಲ ಸನ್ನಿಹಿತವಾಗಿದೆ. ಶಿಫಾರಸು ಜಾರಿ ಅಧಿಕಾರವನ್ನು ಮುಖ್ಯಮಂತ್ರಿಗಳಿಗೆ ವಹಿಸುವ ನಿರ್ಧಾರಕ್ಕೆ ಸಚಿವ ಸಂಪುಟ ಸಭೆ ಬಂದಿದೆ.
ರಾಜ್ಯ ಸರ್ಕಾರ ಶೀಘ್ರದಲ್ಲೇ ಅಧಿಕೃತ ನಿರ್ಧಾರ ಪ್ರಕಟಿಸುವ ಸಾಧ್ಯತೆ ಇದೆ. ಆಯೋಗದ ಶಿಫಾರಸಿನಂತೆ ಸರ್ಕಾರಿ ನೌಕರರ ವೇತನ ಶೇ.27ರಷ್ಟು ಹೆಚ್ಚಳಕ್ಕೆ ಸಚಿವ ಸಂಪುಟ ಸಭೆಯಲ್ಲಿ ಸಚಿವರು ಸಲಹೆ ನೀಡಿದ್ದಾರೆ. ವೇತನ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಸಹ ಒಲವು ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಏಳನೇ ವೇತನ ಆಯೋಗ ಜಾರಿಯಾದರೆ 13.5 ಲಕ್ಷ ನೌಕರರಿಗೆ ಅನುಕೂಲವಾಗಲಿದೆ. 6 ಲಕ್ಷ ಸರ್ಕಾರಿ ನೌಕರರು, ನಿಗಮ-ಮಂಡಳಿ, ಪ್ರಾಧಿಕಾರಗಳ 3 ಲಕ್ಷ ಮತ್ತು ಪಿಂಚಣಿ ಪಡೆಯುತ್ತಿರುವ 4.5 ಲಕ್ಷ ನಿವೃತ್ತರಿಗೆ 7ನೇ ವೇತನ ಆಯೋಗ ಅನ್ವಯವಾಗಲಿದೆ.