ನವೆಂಬರ್ 30ಕ್ಕೆ ಜಿಲ್ಲಾ ಮಟ್ಟದ ಯುವಜನೋತ್ಸವ.
ಚಿಕ್ಕಬಳ್ಳಾಪುರ : ರಾಷ್ಟ್ರೀಯ ಯುವ ಉತ್ಸವದ ಅಂಗವಾಗಿ ನವೆಂಬರ್ 30ರಂದು ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸುವ ವಿವಿಧ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಲ್ಲಿನ 15ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳಿಗೆ ತಿಳಿಸಬೇಕು ಎಂದು ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ,ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಚಿಕ್ಕಬಳ್ಳಾಪುರ ಮೈ ಭಾರತ್-ನೆಹರು ಯುವ ಕೇಂದ್ರ, ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಷ್ಟ್ರೀಯ ಸೇವಾ ಯೋಜನೆ, ಭಾರತ್ ಸ್ಕೌಟ್ಸ್ & ಗೈಡ್ಸ್, ಚಿಕ್ಕಬಳ್ಳಾಪುರ ಜಿಲ್ಲಾ ಯುವ ಸಂಘಗಳ ಸಹಯೋಗದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇತ್ತೀಚಿಗೆ ನಡೆದ “ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ -2024ರ ಕಾರ್ಯಕ್ರಮದ ಪೂರ್ವ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತದ 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಮೃತಕಾಲದಲ್ಲಿ ಯುವಜನರನ್ನು ರಾಷ್ಟ್ರ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸುಕೊಳ್ಳುವ ನಿಟ್ಟಿನಲ್ಲಿ ಯುವಜನರಿಗೆ ದೇಶ ಭಕ್ತಿ ಮತ್ತು ಸ್ವಾತಂತ್ರ್ಯ ಹೋರಾಟದ ಮೌಲ್ಯಗಳ ಬಗ್ಗೆ ಅರಿವು ಮೂಡಿಸುವ ಗುರಿ ಹೊಂದಲಾಗಿದೆ. ಇದರ ಭಾಗವಾಗಿ 15-29 ವರ್ಷ ವಯೋಮಿತಿ ಹೊಂದಿರುವ ಯುವಜನರ ಪ್ರತಿಭೆಗಳನ್ನು ಪ್ರದರ್ಶಿಸಲು ‘ಯುವಶಕ್ತಿ ಸೇ ಜನ ಭಾಗಿದಾರಿ” ಎಂಬ ಶೀರ್ಷಿಕೆಯಡಿ ಜಿಲ್ಲಾ ಮಟ್ಟದ ಯುವ ಉತ್ಸವ ಮತ್ತು ಯುವಜನೋತ್ಸವ -2024 ರ ಕಾರ್ಯಕ್ರಮವನ್ನು ರಾಷ್ಟ್ರ, ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಮಟ್ಟದ ಕಾರ್ಯಕ್ರಮದ ಭಾಗವಾಗಿ ವಿಜ್ಞಾನ ಮೇಳ ಮತ್ತು ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮವನ್ನು ನವೆಂಬರ್ 30 ರಂದು ಬೆಳಿಗ್ಗೆ 10-30 ಗಂಟೆಗೆ ಚಿಕ್ಕಬಳ್ಳಾಪುರ ನಗರದ ಸರ್. ಎಂ.ವಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಈ ಕಾರ್ಯಕ್ರಮದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ನಗದು ಬಹುಮಾನ ನೀಡಿ ರಾಜ್ಯ ಮತ್ತು ರಾಷ್ಟ್ರ ಮಟ್ಟಕ್ಕೆ ಆಯ್ಕೆ ಮಾಡಬೇಕಾಗಿದೆ.ಆದ್ದರಿಂದ ಜಿಲ್ಲೆಯ ಎಲ್ಲಾ ಯುವಕ ಯುವತಿಯರು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಜಿಲ್ಲಾಧಿಕಾರಿಗಳು ಕರೆ ನೀಡಿದರು.
ಸ್ಪರ್ಧೆಯಲ್ಲಿ ಭಾಗವಹಿಸಿ ವಿಜೇತರಾದವರಿಗೆ ನಗದು ಬಹುಮಾನ. ಪ್ರಮಾಣ ಪತ್ರ ನೀಡಲಾಗುವುದು. ಯುವ ಜನರು,ಯುವ ಕಲಾವಿದರು ಸ್ಪರ್ಧೆಗಳಲ್ಲಿ ಭಾಗವಹಿಸುವಂತಹ ವಿದ್ಯಾರ್ಥಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಶಿಷ್ಟಾಚಾರದ ರೀತಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಈ ಕುರಿತು ಸಂಬಂಧ ಪಟ್ಟ ಇಲಾಖೆಯ ಅಧಿಕಾರಿಗಳು ಸಕ್ರೀಯವಾಗಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಯಾಗೊಳಿಸಬೇಕು ಎಂದು ತಿಳಿಸಿ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಕಾರ್ಯಭಾರ ಹಂಚಿಕೆ ಮಾಡಿ ಜಿಲ್ಲಾಧಿಕಾರಿಗಳು ಸೂಚನೆಗಳನ್ನು ನೀಡಿದರು .
ಸ್ಪರ್ಧಿಗಳು ಚಿಕ್ಕಬಳ್ಳಾಪುರ ಜಿಲ್ಲೆಯವರಾಗಿಬೇಕು. ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಪ್ರತಿ ಕಡ್ಡಾಯವಾಗಿ ತರರಬೇಕು.ಸ್ಪರ್ಧಿಗಳು 15 ರಿಂದ 29 ವರ್ಷದ ಒಳಗಿರಬೇಕು.ವಯಸ್ಸಿನ ದೃಢೀಕರಣಕ್ಕಾಗಿ ಶಾಲಾ ಅಂಕಪಟ್ಟಿ,ಮತದಾರರ ಗುರುತಿನ ಚೀಟಿ,ಆಧಾರ ಕಾರ್ಡ್ ಇದರಲ್ಲಿ ಯಾವುದಾದರು ಒಂದನ್ನು ತರಬೇಕು.
ಸ್ಪರ್ಧೆಗಳು ಯುವಕ ಮತ್ತು ಯುವತಿಯರಿಗೆ ಪ್ರತ್ಯೇಕವಾಗಿರುವುದಿಲ್ಲ.ಒಂದು ಜಿಲ್ಲೆಯಲ್ಲಿ ಜಿಲ್ಲೆಯನ್ನು ಪ್ರತಿನಿಧಿಸಿ ಸ್ಪರ್ಧಿಸಿದ ಕಲಾವಿದರು ಮತ್ತೊಂದು ಜಿಲ್ಲೆಯಲ್ಲಿ ಸ್ಪರ್ಧಿಸುವಂತಿಲ್ಲ.ಪಕ್ಕವಾದ್ಯ, ರಂಗಸಜ್ಜಿಕೆ, ವೇಷಭೂಷಣ, ವಿಜ್ಞಾನ ಮೇಳ ಇತ್ಯಾದಿ ಸ್ಪರ್ಧೆಗಳಿಗೆ ಪೂರಕ ಉಪಕರಣಗಳನ್ನು ಸ್ಪರ್ಧಿಗಳೇ ಸಿದ್ಧಪಡಿಸಿಕೊಂಡು ಸ್ಪರ್ಧಿಸಬೇಕು ಎಂದು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಈಶ್ವರಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಎಸ್ ಮಹೇಶ್ ಕುಮಾರ್, ಮಹಿಳಾ ಮತ್ತು ಮಕ್ಕಳ ಇಲಾಖೆಯ ಉಪನಿರ್ದೇಶಕ ವೆಂಕಟೇಶ ರೆಡ್ಡಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಜಿಲ್ಲಾ ಯುವ ಜನ ಅಧಿಕಾರಿ ಕೆ.ರಾಜೇಶ್ ಕಾರಂತ್ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.