‘ ಸಂವಿಧಾನ ಶಕ್ತಿ ನ್ಯೂಸ್’ ಚಿಕ್ಕಬಳ್ಳಾಪುರ : ಈ ಬಾರಿಯ 76 ನೇ ಗಣರಾಜ್ಯೋತ್ಸವ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮವನ್ನು ನಗರದ ಸರ್.ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜನವರಿ 26 ರಂದು ಅರ್ಥಪೂರ್ಣವಾಗಿ ಹಾಗೂ ಸಕಲ ಸರ್ಕಾರಿ ಗೌರವಗಳೊಂದಿಗೆ ಗೌರವ ಪೂರ್ವಕವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದರು.
ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವ ದಿನಾಚರಣೆಯ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಗಣರಾಜ್ಯೋತ್ಸವ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಸಾಂಸ್ಕೃತಿಕ ಕಾರ್ಯಕ್ರಮಗಳು, ಧ್ವಜಾರೋಹಣ, ಗೌರವ ವಂದನೆ, ಗಣ್ಯರ ಭಾಷಣ, ಪೊಲೀಸ್ ಕವಾಯತು, ಪಥಸಂಚಲನ ಕಾರ್ಯಕ್ರಮಗಳನ್ನು ಎಂದಿನಂತೆಯೇ ಆಯೋಜಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದ ವೇದಿಕೆ ಸಿದ್ಧತೆ, ಅಲಂಕಾರ, ಆಸನ ವ್ಯವಸ್ಥೆ, ಕುಡಿಯುವ ನೀರಿನ ವ್ಯವಸ್ಥೆ, ಆಹ್ವಾನ ಪತ್ರಿಕೆಗಳ ಮುದ್ರಣ, ಕಾರ್ಯಕ್ರಮ ನಿರ್ವಹಣೆ, ನಿರೂಪಣೆ, ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಗೈದ 8 ಸಾಧಕರನ್ನು ಗುರ್ತಿಸಿ ಸನ್ಮಾನಿಸಲಾಗುವುದು. ಕ್ರೀಡಾಂಗಣ ಸ್ವಚ್ಛತೆ ಇನ್ನಿತರೆ ಎಲ್ಲಾ ಸಿದ್ಧತಾ ಕಾರ್ಯಗಳನ್ನು ಸಂಬಂಧ ಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ಹಂಚಿಕೆ ಮಾಡಿ ಹಾಗೂ ಜಿಲ್ಲೆಯಾದ್ಯಂತ ಪ್ಲಾಸ್ಟಿಕ್ ಧ್ವಜಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಜಿಲ್ಲಾಡಳಿತದಲ್ಲಿ ಜರುಗುವ ಧ್ವಜಾರೋಹಣಕ್ಕೆ ಹಾಗೂ ಕ್ರೀಡಾಂಗಣಕ್ಕೆ ಎಲ್ಲಾ ಜಿಲ್ಲಾ ಮಟ್ಟದ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ತಿಳಿಸಿದರು.
ಈ ಎಲ್ಲಾ ಕಾರ್ಯಗಳನ್ನು ಸಮರ್ಪಕವಾಗಿ ಮಾಡುವಂತೆ ಹಾಗೂ ಯಾವುದೇ ಕಾರ್ಯದಲ್ಲಿ ಲೋಪಗಳು ಉಂಟಾಗದಂತೆ ನಿಗಾವಹಿಸಬೇಕು ಎಂದು ಸೂಚನೆಗಳನ್ನು ನೀಡಿದರು. ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾರ್ವಜನಿಕರಲ್ಲಿ ಜಿಲ್ಲಾಧಿಕಾರಿಗಳು ಮನವಿ ಮಾಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಎನ್. ಭಾಸ್ಕರ್, ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಅತಿಕ್ ಪಾಷ, ಡಿ.ವೈ.ಎಸ್.ಪಿ ಶಿವಕುಮಾರ್, ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.