ಶಿಡ್ಲಘಟ್ಟ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ಸುಜ್ಞಾನ ನಿಧಿ ಕಾರ್ಯಕ್ರಮದಡಿಯಲ್ಲಿ ತಾಲೂಕಿನ ಒಟ್ಟು 74 ಮಂದಿ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 2023-24ನೇ ಸಾಲಿನ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮವನ್ನು ಕಾಳಿಕಾಂಬ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಪ್ರಶಾಂತ್ ಸಿ ಎಸ್ ಅವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸ್ಥಾಪನೆಯಾಗಿ 25 ವರ್ಷ ಪೂರ್ಣಗೊಳಿಸಿದ ಬೆಳ್ಳಿಹಬ್ಬದ ಸವಿನೆನಪಿಗಾಗಿ ಪೂಜ್ಯ ಡಾ. ಡಿ ವೀರೇಂದ್ರ ಕಡೆಯವರು ಈ ಸುಜ್ಞಾನಿಧಿ ಶಿಷ್ಯವೇತನ ಕಾರ್ಯಕ್ರಮವನ್ನು ಪ್ರಾರಂಭ ಮಾಡಿದರು. ಸಮಾಜದ ಎಲ್ಲಾ ವರ್ಗದ ಕುಟುಂಬಗಳ ಮಕ್ಕಳು ಉನ್ನತ ಶಿಕ್ಷಣವನ್ನು ಪಡೆಯುವ ಮೂಲಕ ಸಮಾಜದಲ್ಲಿ ಸೇವೆ ಸಲ್ಲಿಸುವಂಥಾಗಲಿ ಎಂಬ ಉದ್ದೇಶದೊಂದಿಗೆ ಪೂಜ್ಯರು ಈ ಕಾರ್ಯಕ್ರಮವನ್ನು ಆರಂಭ ಮಾಡಿದ್ದಾರೆ ಎಂದು ತಿಳಿಸಿದರು.
ರಾಜ್ಯಾದ್ಯಂತ ಇದುವರೆಗೂ ಒಟ್ಟು 96894 ವಿದ್ಯಾರ್ಥಿಗಳಿಗೆ ಒಟ್ಟು ರೂ.114 ಕೋಟಿ 50ಲಕ್ಷ ಗಳಷ್ಟು ಶಿಷ್ಯವೇತನ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇದುವರೆಗೂ ಒಟ್ಟು 1193 ವಿದ್ಯಾರ್ಥಿಗಳಿಗೆ ಒಟ್ಟು 1ಕೋಟಿ 65ಲಕ್ಷ ರೂ. ಶಿಷ್ಯವೇತನ ಹಾಗೂ ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 289 ವಿದ್ಯಾರ್ಥಿಗಳಿಗೆ ಒಟ್ಟು ರೂ. 47.38 ಲಕ್ಷ ಶಿಷ್ಯವೇತನ ಪಾವತಿಸಲಾಗಿದೆ,ಈ ಸುಜ್ಞಾನಿಧಿ ಶಿಷ್ಯವೇತನ ಮೊತ್ತವನ್ನು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸಕ್ಕಾಗಿ ಮಾತ್ರ ಉಪಯೋಗಿಸಬೇಕೆಂದು ತಿಳಿಸಿದರು. ಅಲ್ಲದೆ ವಿದ್ಯಾಭ್ಯಾಸ ಮುಗಿಸಿ ಉನ್ನತ ಹುದ್ದೆಗೆ ಹೋಗಿ ತಮ್ಮ ತಂದೆ-ತಾಯಿಯರನ್ನು ಪೋಷಿಸಬೇಕೆಂದು ಕಿವಿ ಮಾತು ಹೇಳಿದರು.
ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದ ದಲಿತ ಸಂಘರ್ಷ ಸೇನೆಯ ಜಿಲ್ಲಾ ಕಾರ್ಯದರ್ಶಿಯಾದ ನಾಗನರಸಿಂಹರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಲಕ ಪೂಜ್ಯರು ಬಡವರ ಮಕ್ಕಳು ಸಹ ಉನ್ನತ ಹುದ್ದೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ,ಇದರಿಂದ ಎಷ್ಟೋ ಮಕ್ಕಳ ಹಾಗೂ ಪೋಷಕರ ಕನಸು ನನಸು ಮಾಡಿಕೊಳ್ಳಲು ಸಹಕಾರಿಯಾಗಿದೆ ಎಂದು ತಿಳಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ತ್ಯಾಗರಾಜ್ ಮಾತನಾಡಿ ಧರ್ಮಸ್ಥಳ ಯೋಜನೆಯ ಇಂತಹ ಅನೇಕ ಸಮಾಜಮುಖಿ ಕಾರ್ಯಕ್ರಮಗಳು ಸಮಾಜದ ಎಲ್ಲಾ ವರ್ಗದ ಕುಟುಂಬಗಳಿಗೂ ತಲುಪುತ್ತಿರುವುದು ಶ್ಲಾಘನೀಯ ಎಂದರು. ಅಲ್ಲದೆ ಇಂತಹ ಕಾರ್ಯಕ್ರಮಗಳ ಸರಿಯಾದ ಉಪಯೋಗ ಪಡೆದುಕೊಂಡು ಆರ್ಥಿಕ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಹೊಂದುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ತಾಲೂಕಿನ ಯೋಜನಾಧಿಕಾರಿ ಸುರೇಶ್ ಗೌಡ,ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯರಾದ ಸುರೇಶ್, ವೆಂಕಟಸ್ವಾಮಿ ರೆಡ್ಡಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು.