ಜಿಲ್ಲಾ ಮಟ್ಟದ ಕಾನೂನು ಅರಿವು ನೆರವು ಕಾರ್ಯಾಗಾರ.
ಚಿಕ್ಕಬಳ್ಳಾಪುರ : ಕಾರ್ಮಿಕರ ಶ್ರಮದಿಂದ ಸಮಾಜವು ಸುವ್ಯವಸ್ಥಿತವಾಗಿ ನಡೆಯುತ್ತಿದೆ. ಅದೇ ರೀತಿಯಲ್ಲಿ ಕಾರ್ಮಿಕ ವರ್ಗದ ಕಲ್ಯಾಣಕ್ಕಾಗಿ ಸರ್ಕಾರ ಹಲವು ಯೋಜನೆ ಮತ್ತು ರಕ್ಷಣೆಗೆ ಕಾನೂನುಗಳು ಜಾರಿಗೊಳಿಸಿದ್ದು, ಇದರ ಸದುಪಯೋಗವನ್ನು ಕಾರ್ಮಿಕರು ಪಡೆದುಕೊಳ್ಳಬೇಕು ಎಂದು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶೆ ಬಿ. ಶಿಲ್ಪ ಅವರು ತಿಳಿಸಿದರು.
ಚಿಕ್ಕಬಳ್ಳಾಪುರ ನಗರದ ಡಾ|| ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ನಡೆದ ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಖಾನೆಗಳು ಮತ್ತು ಬಾಯ್ಲರ್ ಇಲಾಖೆ, ಕೈಗಾರಿಕಾ ಸುರಕ್ಷತೆ ಮತ್ತು ಸ್ವಾಸ್ಥ್ಯ ಇಲಾಖೆ, ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆ, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ, ಜಿಲ್ಲಾ ಕೌಶಲ್ಯಾಭಿವೃದ್ಧಿ ಇಲಾಖೆ ಇವರ ಸಹಯೋಗದೊಂದಿಗೆ ಚಿಕ್ಕಬಳ್ಳಾಪುರದ “ಕಾನೂನು ಅರಿವು ನೆರವು ಕಾರ್ಯಾಗಾರ”ಕ್ಕೆ ಚಾಲನೆ ನೀಡಿ ಅವರು ಮಾತನಾಡಿ, ಕಾನೂನು ಸೇವಾ ಪ್ರಾಧಿಕಾರದ ಮೂಲ ಉದ್ದೇಶ ಮತ್ತು ಕಾನೂನಿನಡಿ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಹಾಗೂ ಕಾನೂನು ಚಟುವಟಿಕೆಗಳು, ಬಾಲ ಕಾರ್ಮಿಕ ಕಾಯ್ದೆ ಇವುಗಳ ಕುರಿತು ತಿಳುವಳಿಕೆ ನೀಡಿದರು.
ಚಿಕ್ಕಬಳ್ಳಾಪುರ ವಿಭಾಗದ ಸಹಾಯಕ ಕಾರ್ಮಿಕ ಆಯುಕ್ತರಾದ ಎ.ಸಿ ತಮ್ಮಣ್ಣ ಅವರು ಮಾತನಾಡಿ, ಕಾರ್ಖಾನೆ, ಕೈಗಾರಿಕೆಗಳಲ್ಲಿ ಮತ್ತು ಕಟ್ಟಡ ನಿರ್ಮಾಣದ ಕೆಲಸಗಳಲ್ಲಿ ಕಾರ್ಮಿಕರು ತಮ್ಮ ಸುರಕ್ಷತೆಗೆ ಹೆಚ್ಚು ಗಮನ ನೀಡಬೇಕು. ಸರ್ಕಾರ ಕಾರ್ಮಿಕ ಇಲಾಖೆ ಮೂಲಕ ಸಾಕಷ್ಟು ಯೋಜನೆಗಳನ್ನು ಹಾಗೂ ಕಾನೂನು ಜಾರಿಗೆ ತಂದು ಕಾರ್ಮಿಕ ವರ್ಗದವರ ಕಲ್ಯಾಣ ಕಾರ್ಯಕ್ರಮಗಳನ್ನು ಮಾಡುತ್ತಿದೆ ಎಂದು ತಿಳಿಸಿ, ಕಾರ್ಮಿಕ ಇಲಾಖೆಯಿಂದ ಅನುಷ್ಟಾನಗೊಳಿಸುತ್ತಿರುವ ವಿವಿಧ ಕಾರ್ಮಿಕ ಕಾಯ್ದೆಗಳ ಬಗ್ಗೆ ಹಾಗೂ ಕಾನೂನಿನಡಿ ದೊರೆಯುವ ಸೌಲಭ್ಯಗಳ ಕುರಿತು ಮಾಹಿತಿಯನ್ನು ಒದಗಿಸಿದರು.
ಕಾರ್ಮಿಕರ ರಾಜ್ಯ ವಿಮಾ ಯೋಜನೆ ವೈದ್ಯಕೀಯ ಸೇವೆಯ ಶಾಖಾ ವ್ಯವಸ್ಥಾಪಕ ಉಷಾ ಅವರು ಮಾತಾನಾಡಿ, ನೌಕರರ ರಾಜ್ಯ ವಿಮಾ ಕಾಯ್ದೆ ಮತ್ತು ನಿಯಮಗಳು ಹಾಗೂ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳು ಕುರಿತು ಮಾಹಿತಿ ನೀಡಿದರು.
ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಯೋಜನೆಗಳು ಮತ್ತು ಸೌಲಭ್ಯಗಳು ಹಾಗೂ ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಡಿ ಅಸಂಘಟಿತ ಕಾರ್ಮಿಕರಿಗೆ ಸಿಗುವ ಯೋಜನೆಗಳು ಮತ್ತು ಸೌಲಭ್ಯಗಳ ಕುರಿತು ಕಾರ್ಮಿಕರಿಗೆ ತಿಳಿಸಿದರು.
ಈ ವೇಳೆ ಕಾರ್ಯಾಗಾರದಲ್ಲಿ ಕಾರ್ಖಾನೆಗಳ ಉಪನಿರ್ದೇಶಕರಾದ ಎಂ.ಎ ಸೋಮಶೇಖರ್, ಕಾರ್ಮಿಕರ ಭವಿಷ್ಯ ನಿಧಿ ಸಂಘಟನೆ ಹಾಗೂ ಪರಿವರ್ತನಾಧಿಕಾರಿ ಬಸವಪ್ರಭು, ಗೌರಿಬಿದನೂರು ಕಾರ್ಮಿಕ ನಿರೀಕ್ಷಕರು ಸತೀಶ್.ಟಿ.ಬಿ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಎಂ.ಪ್ರಸಾದ್, ಎಲ್ಲಾ ತಾಲ್ಲೂಕುಗಳ ಕಾರ್ಮಿಕ ನಿರೀಕ್ಷಕರು ಹಾಗೂ ಕಾರ್ಮಿಕ ಇಲಾಖೆಯ ಸಿಬ್ಬಂದಿ ವರ್ಗದವರು, ವಿವಿಧ ಸಂಘಟನೆಯ ಎಲ್ಲಾ ಮುಖಂಡರು, ವಿವಿಧ ಕೈಗಾರಿಕೆ ಮತ್ತು ವಾಣಿಜ್ಯ ಸಂಸ್ಥೆಯ ಮಾಲೀಕರು ಮತ್ತು ಕಾರ್ಮಿಕರು ಹಾಗೂ ಸಂಘಟಿತ, ಅಸಂಘಟಿತ ಕಾರ್ಮಿಕರು ಹಾಜರಿದ್ದರು.