Monday, December 23, 2024
Homeಅಪರಾಧಪೊಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ವಾರೆಂಟ್.!

ಪೊಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪ ಬಂಧನಕ್ಕೆ ವಾರೆಂಟ್.!

ಬೆಂಗಳೂರು:  ‘ಬಾಲಕಿಯನ್ನು ಕೊಠಡಿಗೆ ಕರೆದೊಯ್ದು ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂಬ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲು ವಿಶೇಷ ನ್ಯಾಯಾಲಯ ಗುರುವಾರ ಆದೇಶಿಸಿದೆ.

ರೇಪ್ ಆಗಿದೆಯೋ ಹೇಗೆ ಎಂಬುದನ್ನು ಚೆಕ್ ಮಾಡುವ ನೆಪದಲ್ಲಿ ಹದಿನೇಳು ವರ್ಷದ ಬಾಲಕಿಯನ್ನು ರೂಮಿನಲ್ಲಿ ಕೂಡಿ ಹಾಕಿಕೊಂಡು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಯಡಿಯೂರಪ್ಪ ಅವರ ಮೇಲಿದೆ. ಇದರಿಂದಾಗಿ ಯಾವುದೇ ಕ್ಷಣದಲ್ಲಾದರೂ ಯಡಿಯೂರಪ್ಪ ಅವರನ್ನು ಬಂಧಿಸುವ ನಿರೀಕ್ಷೆಯಿದೆ. ಇದರ ಬೆನ್ನಲ್ಲೇ ಯಡಿಯೂರಪ್ಪ ಅವರು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣ ಕುರಿತಂತೆ ಜೂ.15ರೊಳಗೆ ಆರೋಪಪಟ್ಟಿ ಸಲ್ಲಿಸಬೇಕಾಗಿದೆ. ಹೀಗಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಯಡಿಯೂರಪ್ಪನವರಿಗೆ ನೋಟೀಸ್ ನೀಡಿತ್ತು. ಈ ನೋಟಿಸ್‌ಗೆ ಉತ್ತರಿಸಿದ್ದ ಯಡಿಯೂರಪ್ಪ, ವಿಚಾರಣೆಗೆ ಹಾಜರಾಗುವುದಾಗಿ ಪತ್ರ ಬರೆದಿದ್ದರು. ವಿಚಾರಣೆಗೆ ಹಾಜರಾಗದ ಹಿನ್ನೆಲೆ ಪೊಲೀಸರು ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸುವಂತೆ ಮನವಿ ಮಾಡಿದ್ದರು.

‘ಆರೋಪಿಯು ತುಂಬಾ ಬಲಾಡ್ಯರು. ನಾಲ್ಕು ಬಾರಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಇವರ ಇಬ್ಬರು ಪುತ್ರರಲ್ಲಿ ಒಬ್ಬರು ಹಾಲಿ ಸಂಸದರು ಹಾಗೂ ಮತ್ತೊಬ್ಬರು ಪಕ್ಷವೊಂದರ ರಾಜ್ಯ ಘಟಕದ ಅಧ್ಯಕ್ಷರು. ಇಂತಹವರು ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ನೋಟಿಸ್‌ ಕೊಟ್ಟರೂ ವಿಚಾರಣೆಗೆ ಹಾಜರಾಗುತ್ತಿಲ್ಲ. ವಿಚಾರಣೆಗೆ ಹಾಜರಾಗದೇ ಸಮಯ ಕೇಳುತ್ತಿದ್ದಾರೆ. ಹೀಗಾಗಿ ಇವರನ್ನು ಬಂಧಿಸಲು ನಿರ್ದೇಶಿಸಬೇಕು’ ಎಂದು ಪ್ರಕರಣದ ವಿಶೇಷ ಪ್ರಾಸಿಕ್ಯೂಟ‌ರ್ ಅಶೋಕ್ ನಾಯಕ್ ನ್ಯಾಯಾಲಯವನ್ನು ಕೋರಿದರು.

ಘಟನೆ ನಡೆದ ದಿನವೇ ಯಡಿಯೂರಪ್ಪ ಸಂತ್ರಸ್ತ ಬಾಲಕಿಯ ತಾಯಿಗೆ ರೂ.2 ಲಕ್ಷ ನೀಡಿದ್ದಾರೆ. ಬೇಡ ಎಂದರೂ ಇಟ್ಟುಕೊ ಎಂದು ಸಮಾಧಾನ ಮಾಡುವ ನೆಪದಲ್ಲಿ ಸಾಕ್ಷ್ಯ ನಾಶಕ್ಕೆ ಪ್ರಯತ್ನಿಸಿದ್ದಾರೆ. ಆ ತಾಯಿ ಮಾಡಿಕೊಂಡಿದ್ದ ವಿಡಿಯೊ ಡಿಲಿಟ್ ಮಾಡಿಸಿದ್ದಾರೆ. ಹೀಗೆ ಹಲವು ಹಂತಗಳಲ್ಲಿ ಸಾಕ್ಷ್ಯ ನಾಶ ಮಾಡುತ್ತಲೇ ಇದ್ದಾರೆ ಎಂದರು.

ಒಂದು ವೇಳೆ ಅವರು ಕೇಳಿದಷ್ಟು ಸಮಯ ನೀಡಿದ್ದೇ ಆದರೆ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳನ್ನು ನಾಶ ಮಾಡುವ ಸಾಧ್ಯತೆ ಇದೆ. ಆದ್ದರಿಂದ, ಕೂಡಲೇ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲು ಆದೇಶಿಸಬೇಕು ಎಂದು ಕೋರಿದರು.

ಈ ಕೋರಿಕೆಯನ್ನು ಮಾನ್ಯ ಮಾಡಿದ ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸ್‌ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶರು  ಬಂಧನ ವಾರೆಂಟ್ ಹೊರಡಿಸಲು ಆದೇಶಿಸಿದರು.

ಇಂದು ಶುಭ ಶುಕ್ರವಾರದಂದು ಯಡಿಯೂರಪ್ಪ ಅವರ ಭವಿಷ್ಯ ನಿರ್ಧಾರವಾಗಲಿದೆ. ಪ್ರಕರಣವನ್ನು ರದ್ದುಪಡಿಸುವಂತೆ ಹಾಗೂ ಜಾಮೀನು ಪಡೆಯಲು ಸಲುವಾಗಿ ಹೈಕೋರ್ಟ್ ನಲ್ಲಿ ತಮ್ಮ ವಕೀಲರ ಮುಖಾಂತರ ಎರಡು ಅರ್ಜಿಗಳು ಸಲ್ಲಿಸಿಕೊಂಡಿದ್ದಾರೆ. ಇಂದು ವಿಚಾರಣೆ ನಡೆಯಲಿದ್ದು ಜಾಮೀನು ಸಿಗುತ್ತೊ ಅಥವಾ ಬಂಧನವಾಗುತ್ತಾರೋ ಎಂಬುವುದು ನ್ಯಾಯಾಲಯದಲ್ಲಿ ಭವಿಷ್ಯ ನಿರ್ಧಾರವಾಗಲಿದೆ.

Social Media Links
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

error: Content is protected !!